Share this... Whatsapp Facebook Pinterest Twitter Linkedin Gmail Print ಮಧ್ಯಾಹ್ನದ ಊಟ ಸೇವಿಸಿ 42 ವಿದ್ಯಾರ್ಥಿಗಳು ಅಸ್ವಸ್ಥ ಸಚಿವ ಟಿ. ರಘುಮೂರ್ತಿ ಆಸ್ಪತ್ರೆಗೆ ಭೇಟಿ; ಇಬ್ಬರು ಜಿಲ್ಲಾ ಆಸ್ಪತ್ರೆಗೆ ರವಾನೆ ಚಳ್ಳಕೆರೆ: ತಾಲೂಕಿನ ದೇವರಮರಿಕುಂಟೆ ಗ್ರಾಮದ ವಾಲ್ಮೀಕಿ ಅನುದಾನಿತ ಶಾಲೆಯಲ್ಲಿ ಮಧ್ಯಾಹ್ನದ ಊಟ ಸೇವಿಸಿದ ಬಳಿಕ 42 ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಬುಧವಾರ ನಡೆದಿದೆ. ಅನ್ನ ಹಾಗೂ ಬಜ್ಜಿ ಸೇವಿಸಿದ ಬಳಿಕ ಹಲವು ವಿದ್ಯಾರ್ಥಿಗಳಿಗೆ ವಾಂತಿ, ಹೊಟ್ಟೆನೋವು ಸೇರಿದಂತೆ ಅಸ್ವಸ್ಥತೆಯ ಲಕ್ಷಣಗಳು ಕಾಣಿಸಿಕೊಂಡಿದ್ದು, ತಕ್ಷಣ ಎಲ್ಲರನ್ನು ಚಳ್ಳಕೆರೆ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಇವರಲ್ಲಿ ಇಬ್ಬರು ವಿದ್ಯಾರ್ಥಿಗಳ ಆರೋಗ್ಯ ಗಂಭೀರವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗೆ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ರಾಜ್ಯ ಸಚಿವ ಟಿ. ರಘುಮೂರ್ತಿ ಆಸ್ಪತ್ರೆಗೆ ಭೇಟಿ ನೀಡಿ ಅಸ್ವಸ್ಥ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದರು. ವೈದ್ಯರು ಹಾಗೂ ಅಧಿಕಾರಿಗಳಿಂದ ಚಿಕಿತ್ಸೆ ಕುರಿತು ಮಾಹಿತಿ ಪಡೆದ ಅವರು, ಯಾವುದೇ ವಿದ್ಯಾರ್ಥಿಗೆ ಚಿಕಿತ್ಸೆಯಲ್ಲಿ ಕೊರತೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಅಲ್ಲದೆ ಘಟನೆಯ ಕುರಿತು ಸಮಗ್ರ ತನಿಖೆ ನಡೆಸಿ, ನಿಖರ ಕಾರಣ ಪತ್ತೆಹಚ್ಚುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ತಹಶೀಲ್ದಾರ್ ರೇಹಾನ್ ಪಾಷ, , ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಚ್. ಶಶಿಧರ್, ಕ್ಷೇತ್ರ ಶಿಕ್ಷಣಾಧಿಕಾರಿ ಕೆ. ಸುರೇಶ್, ಡಿಡಿಪಿಐ ಎಚ್.ಆರ್. ಮಂಜುನಾಥ್, ಆರೋಗ್ಯ ಇಲಾಖೆ ಅಧಿಕಾರಿಗಳಾದ ಡಾ. ಪಂಕಜ್ ಹಾಗೂ ಚಂದ್ರಶೇಖರ್, ಡಿವೈಎಸ್ಪಿ ಸತ್ಯನಾರಾಯಣ ರಾವ್, ಇನ್ಸ್ಪೆಕ್ಟರ್ ಕೆ. ಕುಮಾರ್, ಪಿಎಸ್ಐ ಶಿವರಾಜ್, ಪಿಎಸ್ಐ ಈರೇಶ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆಯ ಮೇಲ್ವಿಚಾರಣೆ ನಡೆಸಿದರು. ವಿದ್ಯಾರ್ಥಿಗಳ ಅಸ್ವಸ್ಥತೆಗೆ ಆಹಾರವೇ ಕಾರಣವೇ ಅಥವಾ ಬೇರೆ ಕಾರಣವಿದೆಯೇ ಎಂಬುದರ ಕುರಿತು ಆಹಾರದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ವರದಿ ಬಂದ ಬಳಿಕ ನಿಖರ ಕಾರಣ ತಿಳಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸದ್ಯ ಹೆಚ್ಚಿನ ವಿದ್ಯಾರ್ಥಿಗಳ ಆರೋಗ್ಯ ಸ್ಥಿರವಾಗಿದ್ದು, ವೈದ್ಯರ ನಿಗಾದಲ್ಲಿ ಚಿಕಿತ್ಸೆ ಮುಂದುವರಿದಿದೆ. Share this... Whatsapp Facebook Pinterest Twitter Linkedin Gmail Print Post navigation ಜೀವನದಿಗೆ ನೀರು ಬಂದರೂ ಬಯಲು ಸೀಮೆಗೆ ತಪ್ಪದ ಬರ ಅನ್ಸಾರಿ ವಿರುದ್ಧ ತಂಗಡಗಿ ಗುಡುಗು