Share this... Whatsapp Facebook Pinterest Twitter Linkedin Gmail Printಬರ ಘೋಷಣೆ, ಬೆಳೆ ಪರಿಹಾರಕ್ಕೆ ಆಗ್ರಹಿಸಿ ರೈತರ ಪ್ರತಿಭಟನೆ ಅಕ್ಷರಮಿತ್ರ, ಹಾಸನ: ಹಾಸನ: ಹಾಸನ ಜಿಲ್ಲೆಯನ್ನು ತಕ್ಷಣವೇ ಬರಪೀಡಿತ ಜಿಲ್ಲೆಯೆಂದು ಘೋಷಿಸಿ, ರೈತರಿಗೆ ಸಮರ್ಪಕ ಪರಿಹಾರ ನೀಡಬೇಕು ಹಾಗೂ ಮೆಕ್ಕೆಜೋಳದ ಬಿಳಿಸುಳಿ ರೋಗಕ್ಕೆ ಕಾರಣವಾಗಿರುವ ಬೀಜ ಕಂಪನಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘ (ಕೆಪಿಆರ್‌ಎಸ್) ಹಾಸನ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಗುರುವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು. ಈ ವೇಳೆ ಮಾತನಾಡಿದ ಸಂಘದ ಮುಖಂಡರು, ಈ ಬಾರಿ ಜಿಲ್ಲೆಯಲ್ಲಿ ಶೇ.60ಕ್ಕೂ ಅಧಿಕ ಮಳೆಯ ಕೊರತೆಯಾಗಿದ್ದು, 2.86 ಲಕ್ಷ ಹೆಕ್ಟೇರ್ ಬಿತ್ತನೆ ಗುರಿಯಲ್ಲಿ ಕೇವಲ 91,534 ಹೆಕ್ಟೇರ್ ಪ್ರದೇಶದಲ್ಲಿ ಮಾತ್ರ ಬಿತ್ತನೆಯಾಗಿದೆ. ಮಳೆಯ ಅಭಾವದಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಆಲೂಗಡ್ಡೆ, ಮೆಕ್ಕೆಜೋಳ, ಶುಂಠಿ, ರಾಗಿ, ಭತ್ತ, ತೆಂಗು ಹಾಗೂ ಅಡಿಕೆ ಸೇರಿದಂತೆ ವಿವಿಧ ಬೆಳೆಗಳು ನಷ್ಟಕ್ಕೊಳಗಾಗಿವೆ ಎಂದು ತಿಳಿಸಿದರು. ಮೆಕ್ಕೆಜೋಳದಲ್ಲಿ ವ್ಯಾಪಕವಾಗಿ ಕಾಣಿಸಿಕೊಂಡಿರುವ ಬಿಳಿಸುಳಿ ರೋಗಕ್ಕೆ ಕಳಪೆ ಬಿತ್ತನೆ ಬೀಜ ಕಾರಣವಾಗಿದ್ದು, ಸಂಬಂಧಿಸಿದ ಬೀಜ ಕಂಪನಿಗಳ ವಿರುದ್ಧ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕು. ರೈತರಿಗೆ ಉಂಟಾದ ನಷ್ಟವನ್ನು ಕಂಪನಿಗಳಿಂದಲೇ ಭರಿಸುವಂತೆ ಸರ್ಕಾರ ಕ್ರಮವಹಿಸಬೇಕು ಎಂದು ಒತ್ತಾಯಿಸಿದರು. ಕಳೆದ ಹಲವು ವರ್ಷಗಳಿಂದ ಬೆಳೆ ವಿಮೆ ಪ್ರೀಮಿಯಂ ಪಾವತಿಸಿದ್ದರೂ ರೈತರಿಗೆ ಸಮರ್ಪಕ ಪರಿಹಾರ ದೊರೆತಿಲ್ಲ. ಕೃಷಿ ಚಟುವಟಿಕೆಗೆ ಮಾಡಿದ ಹೂಡಿಕೆ ವಾಪಸ್ ಬಾರದೆ ರೈತರು ಸಾಲದ ಸುಳಿಯಲ್ಲಿ ಸಿಲುಕಿದ್ದಾರೆ. ಆದ್ದರಿಂದ ಸರ್ಕಾರ ಕೂಡಲೇ ರೈತರ ನೆರವಿಗೆ ಧಾವಿಸಬೇಕು ಎಂದು ಆಗ್ರಹಿಸಿದರು. ಬೇಡಿಕೆಗಳು: ಹಾಸನ ಜಿಲ್ಲೆಯನ್ನು ಬರಪೀಡಿತ ಜಿಲ್ಲೆಯೆಂದು ಘೋಷಿಸುವುದು, ಎಕರೆಗೆ ₹50 ಸಾವಿರ ಬರ ಪರಿಹಾರ ನೀಡುವುದು, ಬೆಳೆ ನಷ್ಟದ ಸಮಗ್ರ ಸಮೀಕ್ಷೆ ನಡೆಸುವುದು, ಬೆಳೆ ವಿಮೆ ಹಾಗೂ ಬರ ಪರಿಹಾರವನ್ನು ತಕ್ಷಣ ಬಿಡುಗಡೆ ಮಾಡುವುದು, ಕುಡಿಯುವ ನೀರು ಮತ್ತು ಜಾನುವಾರುಗಳಿಗೆ ಮೇವು ಒದಗಿಸುವುದು ಹಾಗೂ ರೈತರ ಕೃಷಿ ಸಾಲವನ್ನು ಸಂಪೂರ್ಣ ಮನ್ನಾ ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟರು. Share this... Whatsapp Facebook Pinterest Twitter Linkedin Gmail Print Post navigation ಅರ್ಚಕರ ಸಮಾಜಕ್ಕೆ ಮೈತ್ರಿ ಪಕ್ಷದ ಕೊಡುಗೆ ಏನು: ಡಿಕೆಶಿ ಸೋಮನಹಳ್ಳಿ ಸರ್ಕಾರಿ ಶಾಲೆ ಕೆಪಿಎಸ್ ಶಾಲೆಯಾಗಿ ಮೇಲ್ದರ್ಜೆಗೆ