ಸ್ವಾತಂತ್ರ್ಯೋತ್ಸವಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಿ : ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಸೂಚನೆ

ಅಕ್ಷರ ಮಿತ್ರ, ಹಾಸನ

ಹಾಸನ: ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಯಾವುದೇ ಲೋಪಗಳಿಲ್ಲದೆ, ಅರ್ಥಪೂರ್ಣ ಹಾಗೂ ಅಚ್ಚುಕಟ್ಟಾಗಿ ನಡೆಸಲು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಹೆಚ್.ಕೆ. ಕೃಷ್ಣಮೂರ್ತಿ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಸ್ವಾತಂತ್ರ್ಯ ದಿನಾಚರಣೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಆಗಸ್ಟ್ 15ರಂದು ಬೆಳಿಗ್ಗೆ 8 ಗಂಟೆಯೊಳಗೆ ಎಲ್ಲಾ ಅಧಿಕಾರಿಗಳು ತಮ್ಮ ಕಚೇರಿಗಳಲ್ಲಿ ಧ್ವಜಾರೋಹಣ ನೆರವೇರಿಸಬೇಕು. ಬಳಿಕ ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಕ್ರೀಡಾಂಗಣದ ಹಾಕಿ ಮೈದಾನದಲ್ಲಿ ನಡೆಯುವ ಜಿಲ್ಲಾ ಮಟ್ಟದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಎಲ್ಲ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಡ್ಡಾಯವಾಗಿ ಭಾಗವಹಿಸಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಭಾವಚಿತ್ರದೊಂದಿಗೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರವನ್ನು ಇರಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಆ.14 ಮತ್ತು 15ರಂದು ಜಿಲ್ಲೆಯ ಎಲ್ಲ ಸರ್ಕಾರಿ ಕಟ್ಟಡಗಳಿಗೆ ವಿದ್ಯುತ್ ದೀಪಾಲಂಕಾರ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಸ್ವಾತಂತ್ರ್ಯೋತ್ಸವದ ಅಂಗವಾಗಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳು ಉತ್ತಮವಾಗಿ ಮೂಡಿಬರುವಂತೆ ಅಗತ್ಯ ಕ್ರಮ ಕೈಗೊಳ್ಳಲು ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಿಗೆ ಸೂಚಿಸಿ, ನಗರದ ಮೂರು ಪ್ರಮುಖ ವೃತ್ತಗಳಿಗೆ ದೀಪಾಲಂಕಾರ ವ್ಯವಸ್ಥೆ ಕಲ್ಪಿಸುವಂತೆ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಿಗೆ ತಿಳಿಸಿದರು.

ಸಾಧಕರ ಸನ್ಮಾನಕ್ಕೆ ಉಪ ವಿಭಾಗಾಧಿಕಾರಿಗಳ ಅಧ್ಯಕ್ಷತೆಯಲ್ಲಿ ರಚಿಸಲಾಗಿರುವ ಸಮಿತಿಯು ನಿಗದಿತ ಮಾನದಂಡಗಳ ಆಧಾರದ ಮೇಲೆ ಅರ್ಹರನ್ನು ಆಯ್ಕೆ ಮಾಡಬೇಕು. ಪಥಸಂಚಲನ ಕಾರ್ಯಕ್ರಮ ಆಕರ್ಷಕ ಹಾಗೂ ಶಿಸ್ತಿನಿಂದ ನಡೆಯಲು ತಂಡಗಳು ನಿರಂತರ ತಾಲೀಮು ನಡೆಸಬೇಕು ಎಂದು ಹೇಳಿದರು.

ಸಭೆಯಲ್ಲಿ ಮಹಾನಗರ ಪಾಲಿಕೆ ಆಯುಕ್ತ ಕೃಷ್ಣಮೂರ್ತಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *